ಬೆಂಗಳೂರು ವಿಶ್ವವಿದ್ಯಾಲಯ ಆವರಣದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿರುವ ಬಗ್ಗೆ
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಇಂದು ಸ್ವಚ್ಛತಾ ಅಭಿಯಾನ ಹಮ್ಮಿಕೊಂಡು, 1400 ಕೆ.ಜಿ ತ್ಯಾಜ್ಯವನ್ನು ಸಂಗ್ರಹ ಮಾಡಲಾಗಿದೆ.
ಬೆಂಗಳೂರು ವಿಶ್ವವಿದ್ಯಾಲಯವು ಸುಮಾರು 1200 ಕಿ.ಮೀ ವ್ಯಾಪ್ತಿ ಪ್ರದೇಶವಿದ್ದು, ಇತ್ತೀಚೆಗೆ ರಸ್ತೆ ಬದಿಯಲ್ಲಿ ಹೆಚ್ಚು ಕಸ ಬಿಸಾಡುವ ಸ್ಥಳಗಳು ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಪಾಲಿಕೆ, ಬೆಂಗಳೂರು ವಿಶ್ವವಿದ್ಯಾಲಯ ಹಾಗೂ ಇತರೆ ಸಂಸ್ಥೆಗಳ ಸಹಯೋಗದಲ್ಲಿ ಸ್ವಚ್ಛತಾ ಆಂದೋಲನದಡಿ ಪ್ಲಾಸ್ಟಿಕ್ ಹಾಗೂ ಒಣ ತ್ಯಾಜ್ಯ ಸಂಗ್ರಹಣೆ ಮಾಡಲಾಯಿತು.
1400 ಕೆ.ಜಿ ತ್ಯಾಜ್ಯ ಸಂಗ್ರಹ:
ವಿಶ್ವವಿದ್ಯಾಲಯಕ್ಕೆ ಪ್ರವೇಶ ಕಲ್ಪಿಸುವ ಪ್ರಮುಖ 3 ದ್ವಾರಗಳಲ್ಲಿ ಮೂರು ತಂಡಗಳನ್ನು ರಚಿಸಿಕೊಂಡು ರಸ್ತೆ ಬದಿ, ಪಾದಚಾರಿ ಮಾರ್ಗದಲ್ಲಿ ಬಿದ್ದಿರುವಂತಹ ಒಣ ತ್ಯಾಜ್ಯ, ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗರಹಿಸಲಾಯಿತು. ಅದರಂತೆ ಜ್ಞಾನಭಾರತಿ ಆವರಣದಲ್ಲಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಸುಮಾರು 9 ಕಿ.ಮೀ ವ್ಯಾಪ್ತಿಯಲ್ಲಿ ಪೇಪರ್, ಪ್ಲಾಸ್ಟಿಕ್ ಕವರ್, ಪ್ಲಾಸ್ಟಿಕ್ ಬಾಟಲ್ ಸೇರಿದಂತೆ ಇನ್ನಿತರೆ ಸಾಮಗ್ರಿಗಳನ್ನು ಒಳಗೊಂಡಂತೆ 1,400 ಕೆಜಿ ತ್ಯಾಜ್ಯವನ್ನು ಸಂಗ್ರಹಿಸಲಾಗಿದೆ.
350 ವಿದ್ಯಾರ್ಥಿಗಳ ಬಾಗಿ:
ಸ್ಚಚ್ಛತಾ ಅಭಿಯಾನದಲ್ಲಿ ಪಾಲಿಕೆ ಅಧಿಕಾರಿ/ಸಿಬ್ಬಂದಿಗಳು, ಜ್ಞಾನಭಾರತಿ-ಬೆಂಗಳೂರು ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವಲಯ ಜಂಟಿ ಆಯುಕ್ತರಾದ ಅಜಯ್ ರವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಜ್ಞಾನಭಾರತಿ ಆವರಣದಲ್ಲಿ ತ್ಯಾಜ್ಯ ಬಿಸಾಡುವ ಸಂಖ್ಯೆ ಹೆಚ್ಚಾಗಿದ್ದು, ಅದನ್ನು ತಡೆಯುವ ಸಲುವಾಗಿ ಬೆಂಗಳೂರು ವಿಶ್ವವಿದ್ಯಾಲಯವು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿ ಮಾಡಿದರು.
ವಿಶ್ವವಿದ್ಯಾಲಯದ ಆವರಣದಲ್ಲಿ ಹಾದುಹೋಗುವ ಪ್ರವೇಶ ದ್ವಾರಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿಕೊಂಡು, ಕಸ ಬಿಸಾಡುವುದರ ಮೇಲೆ ಹೆಚ್ಚು ನಿಗಾವಹಿಸಿಬೇಕೆಂದು ಮನವಿ ಮಾಡಿದರು.
ಈ ವೇಳೆ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಶ್ರೀ ಬಿ.ಪಿ ರವಿ, ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ. ಜಯಕರ್ ಎಸ್.ಎಂ, ಘನತ್ಯಾಜ್ಯ ವಿಭಾಗದ ಅಧಿಕಾರಿಗಳಾದ ಭೀಮೇಶ್, ಪೂರ್ಣಿಮಾ, ಪಾಲಿಕೆ ಅಧಿಕಾರಿಗಳು, ಅರಣ್ಯ ವಿಭಾಗದ ಸಿಬ್ಬಂದಿ, ಪೊಲೀಸ್ ಇಲಾಖೆಯ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.