ಇತ್ತೀಚಿನ ಸುದ್ದಿ
Trending

ಕೇತಗಾನಹಳ್ಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ; ಕುಮಾರಸ್ವಾಮಿ ವಿರುದ್ಧ ಎಸ್​ಐಟಿ ವಿಚಾರಣೆಗೆ ಅವಕಾಶ

ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರದ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಚಾರಣೆಗಾಗಿ ರಾಜ್ಯ ಸರ್ಕಾರ ರಚನೆ ಮಾಡಿದ್ದ ವಿಶೇಷ ತನಿಖಾ ದಳ(ಎಸ್​ಐಟಿ)ಕ್ಕೆ ಏಕ ಸದಸ್ಯಪೀಠ ನೀಡಿದ್ದ ಮಧ್ಯಂತರ ಆದೇಶವನ್ನು ದ್ವಿಸದಸ್ಯ ಪೀಠ ಸೋಮವಾರ ತೆರವುಗೊಳಿಸಿದೆ.

ಈ ಆದೇಶದಿಂದ ಸರ್ಕಾರಿ ಜಮೀನು ಒತ್ತುವರಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುವ ಪ್ರಕ್ರಿಯೆ ಸುಗಮವಾಗಿದ್ದು, ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಹಿರಿಯ ಐಎಎಸ್‌ ಅಧಿಕಾರಿ ಅಮ್ಲಾನ್‌ ಆದಿತ್ಯ ಬಿಸ್ವಾಸ್‌ ನೇತೃತ್ವದಲ್ಲಿವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದ ಸರ್ಕಾರದ ಆದೇಶಕ್ಕೆ ತಡೆ ನೀಡಿರುವ ಏಕ ಸದಸ್ಯಪೀಠದ ಮಧ್ಯಂತರ ಆದೇಶದ ವಿರುದ್ದ ರಾಜ್ಯ ಸರ್ಕಾರ ಮೇಲ್ಮವಿ ಅರ್ಜಿ ಸಲ್ಲಿಸಿತ್ತು. ಈ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ವಿಭಾಗೀಯಪೀಠ, ತಡೆಯಾಜ್ಞೆ ತೆರವುಗೊಳಿಸಿದೆ. ಅಲ್ಲದೆ, ಹೆಚ್​ಡಿಕೆ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿತು.

ವಿಚಾರಣೆ ಆರಂಭವಾಗುತ್ತಿದ್ದಂತೆಯೇ ಸರ್ಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ, ಈ ಪ್ರಕರಣದಲ್ಲಿ ಪ್ರತಿವಾದಿಗಳ ವಿರುದ್ಧ 6 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಲಾಗಿದೆ ಎಂಬ ಆರೋಪವಿದೆ. ಹಾಗಾಗಿ ಆ ಒತ್ತುವರಿಯನ್ನು ತೆರವುಗೊಳಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಆ ಬಗ್ಗೆ ವಿಚಾರಣೆಗಾಗಿ ಎಸ್‌ಐಟಿ ರಚಿಸಲಾಗಿದೆ, ಅದು ದಾಖಲೆಗಳನ್ನು ಹಾಜರುಪಡಿಸುವಂತೆ ಎಸ್‌ಐಟಿ ನೋಟಿಸ್‌ ಜಾರಿಗೊಳಿಸಿದೆ. ಆದರೆ, ಎಸ್‌ಐಟಿ ರಚನೆಗೆ ಏಕಸದಸ್ಯ ಪೀಠ ತಡೆ ನೀಡಿದೆ. ಹಾಗಾಗಿ ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ನ್ಯಾಯಾಲಯ, ಏಕ ಸದಸ್ಯಪೀಠ ನೀಡಿದ್ದ ಮಧ್ಯಂತರ ಆದೇಶಕ್ಕೆ ನ.26ರವರೆಗೆ ಮಧ್ಯಂತರ ತಡೆ ನೀಡಿ ವಿಚಾರಣೆ ಮುಂದೂಡಿತು.

ಪ್ರಕರಣವೇನು?:

  • ಹೆಚ್​.ಡಿ.ಕುಮಾರಸ್ವಾಮಿ ಮತ್ತು ಅವರ ಸಂಬಂಧಿ ಡಿ.ಸಿ.ತಮ್ಮಣ್ಣ ಮತ್ತಿತರರು ಕೇತಗಾನಹಳ್ಳಿಯಲ್ಲಿ14 ಎಕರೆ ಭೂಮಿ ಒತ್ತುವರಿ ಮಾಡಿದ್ದಾರೆಂಬ ಆರೋಪ.
  • ಈ ಸಂಬಂಧ ಲೋಕಾಯುಕ್ತ ನೀಡಿದ್ದ ವರದಿ ಜಾರಿಗೊಳಿಸಲು ಹೈಕೋರ್ಟ್‌ ಆದೇಶ ನೀಡಿದ್ದರೂ ಪಾಲಿಸಿಲ್ಲ ಎಂದು ಆಧಿಕ್ಷೇಧಿಪಿಸಿ ಸಮಾಜ ಪರಿವರ್ತನಾ ಸಮುದಾಯದ ಎಸ್‌.ಆರ್‌.ಹಿರೇಮಠ್‌ ಅವರಿಂದ ನ್ಯಾಯಾಂಗ ನಿಂದನೆ ಅರ್ಜಿ.
  • ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ವಿಭಾಗೀಯಪೀಠದಿಂದ ಭೂಮಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ.
  • ಆ ನಂತರ ಜಮೀನಿನ ಸರ್ವೆ ಕಾರ್ಯ ನಡೆಸಿದ ಸ್ಥಳೀಯ ತಹಸೀಲ್ದಾರ್‌. ಹೆಚ್​ಡಿಕೆ ಮತ್ತಿತರರಿಗೆ ನೋಟಿಸ್‌ ಜಾರಿ.
  • ಇದನ್ನು ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿದ್ದ ಹೆಚ್ಡಿಕೆ. ಆ ನಂತರ ಆ ಬಗ್ಗೆ ತನಿಖೆ ನಡೆಸಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲು ಸರ್ಕಾರ ಹಿರಿಯ ಐಎಎಸ್‌ ಅಧಿಕಾರಿ ಅಮ್ಲಾನ್‌ ಆದಿತ್ಯ ಬಿಸ್ವಾಸ್‌ ನೇತೃತ್ವದಲ್ಲಿವಿಶೇಷ ತನಿಖಾ ತಂಡ(ಎಸ್‌ಐಟಿ) ರಚನೆ.
  • ಇದನ್ನು ಪ್ರಶ್ನಿಸಿ ಹೆಚ್​ಡಿಕೆ ಮತ್ತಿತರರಿಂದ ಏಕಸದಸ್ಯಪೀಠದ ಮುಂದೆ ಅರ್ಜಿ. ಎಸ್‌ಐಟಿ ರಚನೆ ಆದೇಶಕ್ಕೆ ತಡೆ ನೀಡಿದ ನ್ಯಾಯಾಲಯ.

Related Articles

Leave a Reply

Your email address will not be published. Required fields are marked *

Back to top button